ಬೆಂಗಳೂರು: ಡಿಸಿಗಳೆಂದರೆ ಮಹಾರಾಜರಲ್ಲ. ಇಂತಹ ಮನೋಭಾವ ಇದ್ದರೆ ಅಭಿವೃದ್ಧಿ, ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.
ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ ಎಂದರು.
ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು
ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು
ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.