ಬೆಂಗಳೂರು: ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ನಾಯಕತ್ವ ಪೈಪೋಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕೆಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ವ್ಯಕ್ತಿಗಿಂತ ಪಕ್ಷನಿಷ್ಠೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದವರು ನಾವು. ನನಗೆ ಸಚಿವ ಸ್ಥಾನ ಸಿಗದಿದ್ದಾಗಲೂ ಉಸಿರು ಎತ್ತಿರಲಿಲ್ಲ. ಸಿದ್ದರಾಮಯ್ಯ ಪರ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ. ನಂತರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಾಗಲು ಅವರನ್ನೇ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂದು ಹೇಳಿದ್ದೆ. ಹೀಗಾಗಿ ನನಗೆ ವ್ಯಕ್ತಿಗಿಂತ ಪಕ್ಷದ ಹಿತ ಮುಖ್ಯ. ಪಕ್ಷ ಪೂಜೆ ಮಾಡುವವನು ನಾನು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರು ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ತೀರ್ಮಾನಿಸಿದ್ದು, ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.