ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಬಾದಾಮಿ, ವರುಣಾ, ಚಾಮುಂಡೇಶ್ವರಿ, ಕೋಲಾರ, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಕಾಂಕ್ಷಿಗಳು ಕೆಪಿಸಿಸಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕಿದೆ. 1,200 ಮಂದಿ ಅರ್ಜಿ ಪಡೆದುಕೊಂಡಿದ್ದು, 1030 ಜನ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಹಾಲಿ ಶಾಸಕರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅರ್ಜಿ ಸಲ್ಲಿಸದೇ ಕ್ಷೇತ್ರದ ಕುತೂಹಲ ಉಳಿಸಿಕೊಂಡಿದ್ದಾರೆ.
ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇಂದು ನಿರ್ಧಾರವಾಗುವ ಸಾಧ್ಯತೆ ಇದೆ. ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧೆ ಬಯಸಿದರೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಿದ್ದು, ಸಿದ್ದರಾಮಯ್ಯ ವರುಣಾ ಇಲ್ಲವೇ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.