ಗದಗ: ರಾಜ್ಯದ ರೈತರಿಗೆ 8 ಗಂಟೆ ತ್ರಿಫೇಸ್ ವಿದ್ಯುತ್ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ನರಗುಂದದಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು. ರೈತರಿಗೆ 8 ಗಂಟೆ ತ್ರಿಫೇಸ್ ವಿದ್ಯುತ್ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ರಾಜ್ಯದ ಜನ ಎರಡು ಹೊತ್ತು ಊಟ ಮಾಡಬೇಕು. ಹಾಗಾಗಿ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದೇವೆ. ಕಳೆದ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಅವರು 10% ಸರ್ಕಾರವೆಂದು ಆರೋಪ ಮಾಡಿದ್ದರು. ಆದರೆ, ಈಗ ರಾಜ್ಯದಲ್ಲಿ 40% ಕಮಿಷನ್ ಸರ್ಕಾರವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿರುವುದು ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ. ಅದರಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಕೂಡ ಒಬ್ಬರು ಎಂದು ಕಿಡಿಕಾರಿದ ಸಿದ್ಧರಾಮಯ್ಯ, ಬಡವರಿಗೆ ಮನೆ ಕೊಡಲು ಆಗದಿದ್ದರೆ ಅಧಿಕಾರದಲ್ಲಿರಲು ಅಯೋಗ್ಯರು. 2018ರ ಚುನಾವಣೆ ವೇಳೆ ಅಪಪ್ರಚಾರ ಮಾಡಿ ನಮ್ಮನ್ನು ಸೋಲಿಸಿದ್ದರು ಎಂದು ಆರೋಪಿಸಿದ್ದಾರೆ.