
ಹಾಸನ: ಗ್ಯಾರಂಟಿ ಯೋಜನೆ ಜಾರಿ ಮಾಡಿ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಕೊಟ್ಟ ಮಾತಿನಂತೆ ನಾವು ನಡೆದುಕೊಂಡು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಬಾಣಾವರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಕೊಟ್ಟ ಭರವಸೆಯಲ್ಲಿ ಶೇ.10ರಷ್ಟು ಈಡೇರಿಸಿಲ್ಲ. ನಾವು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬರಗಾಲವಿದ್ದರೂ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ನೀಡುತ್ತಿದ್ದೇವೆ. ಲೂಟಿ ಮಾಡಿ ಜನರಿಂದ ತಿರಸ್ಕಾರಗೊಂಡವರು ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದರು.
ಅರಸಿಕೆರೆಗೆ ಎತ್ತಿನಹೊಳೆ ಯೋಜನೆ ನೀರು ಕೊಟ್ಟೆ ಕೊಡುತ್ತೇವೆ. ಮಣ್ಣಿನ ಮಕ್ಕಳು ಎಂದು ಹೇಳುವವರು ಯೋಜನೆ ವಿರೋಧಿಸಿದ್ದರು ಎಂದು ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಕಿಡಿಕಾರಿದರು.