ಬೆಂಗಳೂರು: ಲೋಡ್ ಶೆಡ್ಡಿಂಗ್ ನಿಂದಾಗಿ ರಾಜ್ಯದಲ್ಲಿ ಕತ್ತಲು ಆವರಿಸಿದೆ. ಮಹದೇವಪ್ಪನಿಗೂ ಕತ್ತಲೂ, ಕಾಕಾ ಪಾಟೀಲನಿಗೂ ಕತ್ತಲು ಎನ್ನುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದರು. ಗ್ರಾಹಕರ ಮನೆಗೆ ಹೆಚ್ಚುವರಿ ಕರೆಂಟ್ ಬಿಲ್ ಬಂದಿದೆ. ಪ್ರತಿದಿನ 7 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲಿ 7 ಗಂಟೆ ವಿದ್ಯುತ್ ನೀಡುತ್ತಿದ್ದಾರೆ ಎಂದು ಅವರು ಹೇಳಲಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ ಸಿಎಂ ಸಿದ್ದರಾಮಯ್ಯ ಡುಪ್ಲಿಕೇಟ್ ಮುಖ್ಯಮಂತ್ರಿ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ ಎರಡು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಿ. ತೆಲಂಗಾಣದ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.