ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಮುಡಾ ಸಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಅಭಿಪ್ರಾಯ ಪಡೆದು ಚರ್ಚೆ ನಡೆಸಿದ್ದಾರೆ. ಈ ನಡುವೆ ಎಐಸಿಸಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ.
ಸಿಎಂ ಸಿದ್ದರಾಮಯ್ಯನವರಿಗೆ ಕರೆ ಮಾಡಿರುವ ಹೈಕಮಾಂಡ್ ನಾಯಕರು ಹೆದರುವ ಅಗತ್ಯವಿಲ್ಲ. ಧೈರ್ಯವಾಗಿರಿ ಎಂದಿದ್ದಾರೆ. ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಪ್ರಮುಖ ನಾಯಕರು ಸಿಎಂ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಅಭಯ ನೀಡಿದ್ದು, ನಿಮ್ಮ ಜೊತೆ ನಾವಿದ್ದೇವೆ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದು ಹೇಳಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಲು ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಸಚಿವರು ರಾಜಭವನ ಚಲೋ ನಡೆಸಲು ಸಿದ್ಧತೆ ನಡೆಸಿದ್ದಾರೆ.