ಬೆಂಗಳೂರು: ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 04 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ಆ ಯೋಜಿಸಲಾಗುವುದು. ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 06 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗುವುದು.
ಏಷಿಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಘೋಷಿಸಿದರು.
ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು.
ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದರು.