ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲಿಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಿಲ್ಲಬೇಕು. ತಪ್ಪಿತಸ್ಥರ ವಿರುದ್ಧ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಎಂದು ಎಚ್ಚರಿಕೆ ನೀಡಿದರು.
ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸೂಚನೆ ನೀಡಿದರು.
ಪೊಲೀಸರಿಗೆ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದರು.
ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಹೇಳಿದರು.