ಬೆಳಗಾವಿ: ಲೋಕಸಭಾ ಚುನಾವಣೆ ಹಿನೆಲೆಯಲ್ಲಿ ರಾಜ್ಯದಲ್ಲಿ ಮೇ 7ರಂದು 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಹಂತದ ಚುನಾವಣೆಯಲ್ಲಿ 8-9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. 2ನೇ ಹಂತದ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯ ದಿವಾಳಿಯಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಬಳಿಕ ಲೋಕಸಭಾ ಚುನವಣೆಗೆ ಮಾತ್ರ ಗ್ಯಾರಂಟಿ ಯೋಜನೆ. ಅಭಿವೃದ್ಧಿ ಸರ್ಕಾರದಲ್ಲಿ ಹಣವಿಲ್ಲ ಎಂದು ಅಪಪ್ರಚಾರ ಮಾಡಿದರು. ಆದರೆ ಸರ್ಕಾರ ಅಭಿವೃದ್ಧಿ ಯೋಜನೆಗಳಿಗಾಗಿ 68 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು, ಬಡವರಿಗೆ ಅನುಕೂಲವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 44 ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. ನಾವು ನುಡಿದಂತೆ ನಡೆದಿದ್ದೇವೆ ಹೀಗಾಗಿ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಹೆಚ್ಚಿದೆ..
ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರೂ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲಿಲ್ಲ. ಹಾಗಾಗಿ ನಾವು 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿದ್ದೇವೆ ಎಂದರು.
ಹಿಂದಿನ ಸಿಎಂ ಬೊಮ್ಮಾಯಿ ಬಜೆಟ್ ಗಿಂತ ಜಾಸ್ತಿ ಮೊತ್ತದ ಬಜೆಟ್ ಮಂಡಿಸಿದ್ದೇವೆ. ಈ ಗ್ಯಾರಂಟಿ ಯೋಜನೆಗಳು ನಿರಂತರವಾಗಿರಲಿವೆ. ಬಿಜೆಬಿಗೆ ಗ್ಯಾರಂಟಿ ಕಂಡರೆ ಆಗಲ್ಲ ಹೇಗಾದರೂ ನಿಲ್ಲಿಸಬೇಕೆಂದು ಬಡವರ ವಿರೋಧಿ ಮಾತುಗಳನ್ನಾಡುತ್ತಿದ್ದಾರೆ ಎಂದು ಕಿಡಿಕಾರಿದರು.