ರಾಯಚೂರು: ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ತಮ್ಮ ಪರ ಮಾತನಾಡಿದ್ದರಲ್ಲಿ ತಪ್ಪೇನಿಲ್ಲ. ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ , ವಿರೋಧ ಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ.ದೇವೇಗೌಡರು ಒಬ್ಬರು ಎಂದರು.
ಇನ್ನು ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎನ್ನುತ್ತಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅಶೋಕ್ ಮೇಲೆ ಎಫ್ಐಆರ್ ಆಗಿದೆ. ತಾನು ರಾಜಿನಾಮೆ ನೀಡಲು ಸಿದ್ದ ಎಂದಿದ್ದಾರೆ. ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಟಾಂಗ್ ನೀಡಿದರು.