alex Certify BIG NEWS: ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿಜೆಪಿ ನಾಯಕರಿಗೆ ಸಿಎಂ ಖಡಕ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿಜೆಪಿ ನಾಯಕರಿಗೆ ಸಿಎಂ ಖಡಕ್ ಪ್ರಶ್ನೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಅಲ್ಲದೇ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ನಾಯಕರ ನಡೆಗೆ ಕೆಂದ ಕಾರಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.

ಈ ಹಿಂದೆ ಆರೋಪ ಕೇಳಿಬಂದ ಮಾತ್ರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದ ಬಿಜೆಪಿ ನಯಕರು ಈಗ ನನ್ನ ರಾಜೀನಾಮೆಯನ್ನು ಯಾವ ನಾಲಿಗೆಯಲ್ಲಿ ಕೇಳುತ್ತಿದ್ದೀರಿ? ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ.
ಆರ್.ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.

ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.
ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.
ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...