ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆ ಚುರುಕುಗೊಂಡಿದೆ. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಇನ್ನು ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆಯೂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ. ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದು ತಿಳಿಸಿದರು.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.