ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಕೇಂದ್ರ ಬಜೆಟ್ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 48.21 ಲಕ್ಷ ಕೋಟಿ ಗಾತ್ರದ ಕೇಂದ್ರ ಬಜೆಟ್ ಮಂಡಿಸಿದ್ದಾರೆ. 7ನೇ ಬಾರಿಗೆ ದಾಖಲೆ ಬಜೆಟ್ ಮಂಡಿಸಿದ್ದಾರೆ. ಬಿಹಾರ, ಆಂಧ್ರಪ್ರದೇಶ ಬಿಟ್ಟರೆ ಬೇರೆ ಯಾವ ರಾಜ್ಯಗಳಿಗೂ ಏನೂ ಕೊಟ್ಟಿಲ್ಲ. ಈ ಎರಡು ರಾಜ್ಯಗಳ ಹೊರತುಪಡಿಸಿ ದೇಶದ ಯಾವುದೇ ರಾಜ್ಯಗಳಿಗೂ ಬಜೆಟ್ ನಲ್ಲಿ ಅನುದಾನ ನೀಡಿಲ್ಲ. ಮೋದಿಯವರು ಪ್ರಧಾನಿಯಾಗಿ ಉಳಿಯಬೇಕೆಂದರೆ ಆಂಧ್ರ, ಬಿಹಾರ ರಾಜ್ಯಗಳ ಬೆಂಬಲ ಬೇಕು. ಅದಕ್ಕಾಗಿ ಆ ಎರಡು ರಾಜ್ಯಗಳಿಗೆ ಮಾತ್ರ ವಿಶೇಷ ಅನುದಾನ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾದವರು. ಬಜೆಟ್ ಪೂರ್ವ ಚರ್ಚೆಯಲ್ಲಿ ಅನೇಕ ಯೋಜನೆಗಳ ಬಗ್ಗೆ ಮನವಿ ಮಾಡಿದ್ದೆವು. ಕರ್ನಾಟಕಕ್ಕೆ ವಿಶೇಷ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡದೇ ನಿರ್ಲಕ್ಷ್ಯಿಸಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಒಂದು ರೀತಿ ಚೊಂಬು ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.