ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ 14 ವರ್ಷಗಳಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವುದು ವಿಶೇಷವಾಗಿದೆ.
ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ 14 ವರ್ಷಗಳಿಂದ ಅವರು ಶಾಸಕಾಂಗ ನಾಯಕರಾಗಿದ್ದಾರೆ. 2006ರಲ್ಲಿ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದರು. ಆಗ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಗೆ ಆಯ್ಕೆಯಾಗಿದ್ದರಿಂದ 2009 ರಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿತ್ತು.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮತ್ತೆ ಶಾಸಕಾಂಗ ನಾಯಕರಾಗಿದ್ದರು. 2018ರಲ್ಲಿ ಕಾಂಗ್ರೆಸ್ ಸೋತಾಗ ಸಿದ್ದರಾಮಯ್ಯ ಅವರನ್ನೇ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಸಲಾಗಿತ್ತು. ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ನಂತರ ಪ್ರತಿಪಕ್ಷ ನಾಯಕರಾಗಿದ್ದರು.
ಈಗ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿದ್ದು, ಸಿದ್ದರಾಮಯ್ಯ ಮತ್ತೆ ಸಿಎಲ್‍ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇಷ್ಟು ಸುಧೀರ್ಘ ಅವಧಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದವರು ರಾಜ್ಯದಲ್ಲಿ ಯಾರು ಇಲ್ಲ. ಸಿದ್ದರಾಮಯ್ಯ ಪಕ್ಷದ ಇತಿಹಾಸದಲ್ಲಿಯೇ 14 ವರ್ಷಗಳಿಂದ ಶಾಸಕಾಂಗ ನಾಯಕರಾಗಿದ್ದಾರೆ. 13 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಅವರು ಶಾಸಕಾಂಗ ನಾಯಕನಾಗಿಯೂ ಇತಿಹಾಸ ಬರೆದಿದ್ದಾರೆ.