ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹರದರಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೆರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು.
ವರುಣಾ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.
ನಾವು ಕೊಟ್ಟ ಭರವಸೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೆವೆ. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ? ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದ ಸಿಎಂ, ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ಸಹಿಸಲು ಸಾಧ್ಯವಿಲ್ಲ. ನಾನು ಎಲ್ಲಿಯವರೆಗೆ ಇರುತ್ತೇನೋ ಅಲ್ಲಿಯವರೆಗೂ ಬದವರ ಪರ ಕೆಲಸ ಮಾಡುತ್ತೇನೆ ಎಂದರು.
ನಾನು ಎರಡು ಬಾರಿ ಸಿಎಂ ಆಗಿದ್ದೇನೆ ಆದರೆ ನನ್ನ ತವರು ಕ್ಷೇತ್ರ ಮೈಸೂರಲ್ಲಿ ಒಂದೂ ಮನೆ ಇಲ್ಲ. ಇನ್ನೂ ಬಾಡಿಗೆ ಮನೆಯಲ್ಲೇ ವಾಸವಾಗಿದ್ದೆನೆ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು. ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ನೆರೆದಿದ್ದ ಜನರನ್ನುದ್ದೇಶಿಸಿ ಭಾವನಾತ್ಮಕ ಮಾತುಗಳನ್ನಾಡಿದರು.