ಬೆಂಗಳೂರು: ಬಿಜೆಪಿ ನಾಯಕರಿಗೆ ಉಪಚುನಾವಣೆಯಲ್ಲಿ ಯಾವುದೇ ವಿಷಯಗಳಿಲ್ಲ. ಹಾಗಾಗಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿವಾದವೇ ಅಲ್ಲದಿರುವುದನ್ನು ಬಿಜೆಪಿಯವರು ವಿವಾದ ಮಾಡಲು ಹೊರಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯಗಳಿಲ್ಲ. ಹಾಗಾಗಿ ಉಪಚುನಾವಣೆ ಸಂದರ್ಭದಲ್ಲಿ ಈ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಕ್ಫ್ ನೋಟಿಸ್ ಬಂದ ರೈತರು ಆತಂಕಪಡುವ ಅಗತ್ಯವಿಲ್ಲ. ಹಲವಾರು ವರ್ಷಗಳಿಂದ ರೈತರ ಸ್ವಾಧೀನದಲ್ಲಿರುವ ಜಮೀನನ್ನು ಖಾಲಿ ಮಾಡಿಸುವುದಿಲ್ಲ. ನೋಟಿಸ್ ವಾಪಾಸ್ ಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇದೇ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಕೂಡ ಪ್ರತಿಕ್ರಿಯಿಸಿದ್ದು, ವಕ್ಫ್ ಬೋರ್ಡ್ ನವರು ಜಿಲ್ಲಾಧಿಕರಿಗಳ ಮೂಲಕ ನೊಟಿಸ್ ನೀಡಿದ್ದಾರೆ. ನೋಟಿಸ್ ಹಿಂಪಡೆಯಲು ಸೂಚಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ಸಿಎಂ ಸೂಚಿಸಿದ್ದಾರೆ. ಹೀಗಾಗಿ ವಿಷಯ ಇಲ್ಲಿಗೆ ಮುಗಿದಿದೆ. ಪರಿಶೀಲನೆ ಮಾಡುವವರೆಗೂ ಯಾವುದೇ ನೋಟಿಸ್ ಇಲ್ಲ. ಈ ವಿಚಾರವಾಗಿ ಬಿಜೆಪಿಯವರು ಬಣ್ಣ ಹಚ್ಚಿ ದೊಡ್ಡ ವಿಷಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.