ಬೆಂಗಳೂರು: ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿದರು. ಸಮಾವೇಶದಲ್ಲಿ 4000 ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ನಗದು ಸಹಾಯಧನ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶ ಇಲ್ಲ. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ನಾನು ಮುಖ್ಯಮಂತ್ರಿಯಾದ ಬಳಿಕ ಜಾರಿಗೆ ತಂದಿದ್ದೇನೆ. ಸಫಾಯಿ ಕರ್ಮಚಾರಿಗಳಿಗೆ ಬದುಕು ಕಟ್ಟಿಕೊಡುವುದು ನಮ್ಮ ಬದ್ಧತೆ ಎಂದರು.