ಬೆಂಗಳೂರು: ಕಲುಷಿತ ನೀರು ಸೇವಿಸಿ ಮೈಸೂರಿನ ಎರಡು ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಜನರು ಅಸ್ವಸ್ಥ ಹಾಗೂ ಓರ್ವ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ ಎಂದು ಗುಡುಗಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಹೇಳಿದರು.
ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.