
ಬೆಂಗಳೂರು: ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂದು ಗುಡುಗಿದರು.
ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ , ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.
ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು. ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ. ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನಿರಲ್ಲ ಅಧಿಕಾರಿಗಳು ತಮ್ಮ ಧೋರಣೆ ಬದಲಿಸಿಕೊಳ್ಳಿ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ. ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಖಡಕ್ ಆಗಿ ಸೂಚಿಸಿದರು.