ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರಕ್ಕಾಗಿ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ನರೇಂದ್ರ ಮೋದಿಯವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಇದರ ಮಧ್ಯೆ ಮೈಸೂರು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಚಾಮರಾಜನಗರ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಿದ್ದಾರೆ. ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ವಿ. ಶ್ರೀನಿವಾಸ್ ಪ್ರಸಾದ್, ಈ ಬಾರಿ ಕಣಕ್ಕಿಳಿದಿಲ್ಲ. ಹೀಗಾಗಿಯೇ ಸಿದ್ದರಾಮಯ್ಯ, ಶ್ರೀನಿವಾಸ್ ಪ್ರಸಾದ್ ರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಶ್ರೀನಿವಾಸ್ ಪ್ರಸಾದ್ ಇದಕ್ಕೆ ಸಮ್ಮತಿಸಿದರೆ ಚಾಮರಾಜನಗರ ಹಾಗೂ ಮೈಸೂರು ಕ್ಷೇತ್ರದಲ್ಲಿ ಬಿಜೆಪಿಗೆ ಒಂದಷ್ಟು ಹಿನ್ನಡೆಯಾಗುವುದು ಖಚಿತ.