ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್ ಅಕ್ರಮದ ಕುರಿತು ನ್ಯಾಯಮೂರ್ತಿ ಮೈಕೆನ್ ಡಿ ಕುನ್ಹಾ ನೇತೃತ್ವದ ಆಯೋಗದ ಮಧ್ಯಂತರ ವರದಿ ಸಲ್ಲಿಸಿದ್ದು, ಇದರ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿದ್ದಾರೆ. ಸಚಿವರಾದ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಪ್ರಕರಣದಲ್ಲಿ ಕ್ರಿಮಿನಲ್ ಅಂಶಗಳಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲು ಸಂಪುಟ ಸಭೆ ನಿರ್ಣಯ ಕೈಗೊಂಡಿದೆ ಎಂದು ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.