ಉತ್ತರ ಪ್ರದೇಶ ಸೀತಾಪುರದ ಸಕ್ಕರೆ ಕಾರ್ಖಾನೆಯಲ್ಲಿ ಸೋಮವಾರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.
ರಾಮ್ ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರಪುರ ಸಕ್ಕರೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ನಿರ್ವಹಣೆ ಕಾರ್ಯದ ವೇಳೆ ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸರ್ಕಲ್ ಆಫೀಸರ್(ನಗರ) ಅಮನ್ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರನ್ನು ಇನ್ನೂ ಗುರುತಿಸಲಾಗಿಲ್ಲ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಅಭಿವೃದ್ಧಿ ಹಂತದಲ್ಲಿದ್ದ ಧಾನ್ಯ ಆಧಾರಿತ ಬಾಯ್ಲರ್ ಸ್ಫೋಟಗೊಂಡಿದೆ. ಪರಿಣಾಮ ಮೂವರು ಗಿರಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಎಸ್‌ಡಿಎಂ, ಎಡಿಎಂ, ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯಾರಿಗೂ ಗಾಯಗಳಾಗಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೆಚ್ಚುವರಿ ಎಸ್ಪಿ(ಉತ್ತರ) ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೀತಾಪುರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.