ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದರೂ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮತ್ತೊಂದು ಫೋಟೋ ಕೂಡ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರ ಜೊತೆಗೆ ಜೆಡಿಎಸ್ ಶಾಸಕ ಎಸ್.ಎಲ್. ಭೋಜೇಗೌಡ ಸಭೆ ನಡೆಸಿದ್ದಾರೆ.
ಭೋಜೇಗೌಡ ಅವರು ತಮ್ಮ ನಿವಾಸಕ್ಕೆ ಬಂದಿದ್ದ ಜೆಡಿಎಸ್ ಕಾರ್ಯಕರ್ತರಿಗೆ ಈ ಬಾರಿ ಎಲ್ಲರೂ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವಂತೆ ಕರೆ ನೀಡಿದ್ದರು. ಈ ವೇಳೆ ಕಾರ್ಯಕರ್ತರೊಬ್ಬರು ಇಷ್ಟು ದಿನ ಜೆಡಿಎಸ್ ವೋಟು ಹಾಕಿದ್ದೇವೆ. ಈಗ ಬದಲಿಸಲು ಕೈ ಮುಂದೆ ಬರಲ್ಲ ಎಂದಾಗ ಇದೊಂದು ಸಾರಿ ಕಾಂಗ್ರೆಸ್ ಗೆ ಮತ ಹಾಕಿ ಎಂದು ಭೋಜೇಗೌಡ ಹೇಳಿದ ವಿಡಿಯೋ ವೈರಲ್ ಆಗಿತ್ತು.
ಈಗ ಕಾಂಗ್ರೆಸ್ ಕಚೇರಿಗೆ ಹೋಗಿ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪರಮಾಪ್ತರಾಗಿರುವ ಭೋಜೇಗೌಡ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದಾರೆಯೇ ಎನ್ನುವ ಚರ್ಚೆ ನಡೆದಿದೆ.