ಬಳ್ಳಾರಿ : ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಶನಿವಾರದಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿದ್ದು, ಕಸ ವಿಲೇವಾರಿ ವಾಹನಗಳಿಗೆ ತ್ಯಾಜ್ಯ ನೀಡಬೇಕು ಎಂದು ಸೂಚಿಸಿದರು.
ಕಾನೂನು ಬಾಹಿರವಾಗಿ ಯಾರಾದರೂ ಒಂಟೆ, ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಮುಖ್ಯ ಯೋಜನಾಧಿಕಾರಿ ಪ್ರಮೋದ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.