ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಸಂವಿಧಾನದ ಮಾರ್ಗದಲ್ಲಿ ಎಲ್ಲರೂ ಕೆಲಸ ಮಾಡಬೇಕು. ಸಂವಿಧಾನ ಬದ್ಧವಾಗಿ ಕೆಲಸ ಮಾಡಲು ಪ್ರಮಾಣವಚನ ಸ್ವೀಕರಿಸಿದ್ದೇವೆ. ಯಾರಾದರೂ ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸಲು ಪೂರಕವಾಗಿ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿ ವೇತನ ವಿಳಂಬದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.