ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ರೂಪಿಸಲಾಗಿದೆ.
ಅ. 28 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಿ ನಾಡಗೀತೆ ಸೇರಿದಂತೆ ನಾಡು ನುಡಿಯ ಶ್ರೇಷ್ಠತೆ ಸಾರುವ 5 ಗೀತೆಗಳನ್ನು ಹಾಡುವ ಸಾಮೂಹಿಕ ಗಾಯನ ಏರ್ಪಡಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಅ. 28 ರಂದು ಬೆಳಿಗ್ಗೆ 11 ಗಂಟೆಗೆ ‘ನನ್ನ ಹಾಡು ನನ್ನ ಹಾಡು’ ಸಮೂಹ ಗೀತೆ ಗಾಯನ ಏರ್ಪಡಿಸಿ ಮೊದಲು ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ ಹಾಡಬೇಕು.
ನಂತರ ಉಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಡಿ.ಎಸ್. ಕರ್ಕಿ ಅವರ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ’, ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡುವ ಮೂಲಕ ನಾಡು-ನುಡಿಯ ಬಗ್ಗೆ ಅಭಿಮಾನ ಹಾಗೂ ಶ್ರೇಷ್ಠತೆ ಸಾರಬೇಕು ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಈ ಗೀತೆಗಳನ್ನು ಹಾಡುವ ಧಾಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯೂಟ್ಯೂಬ್ ಚಾನೆಲ್ ಲಿಂಕ್ ನಲ್ಲಿ ಅಪ್ಲೋಡ್ ಮಾಡಲಾಗಿದೆ.