ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಮೇ 22 ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಮವಾರದಿಂದ ಮೂರು ದಿನ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಸಭೆಯ ನಂತರ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಿದ್ದು, ಹೊಸ ವಿಧಾನಸಭೆ ಮೇ 24 ರ ಒಳಗೆ ರಚನೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆ ಕಲಾಪ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಮನವಿ ಮಾಡಲಾಗಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ನಂತರ ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.