
ನವದೆಹಲಿ: ದೆಹಲಿಗೆ ತೆರಳುತ್ತಿದ್ದ ಸೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ದರ್ಭಾಂಗಾ-ದೆಹಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಿಹಾರದ ದರ್ಭಾಂಗಾದಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬುಕಿಂಗ್ ಕಚೇರಿಗೆ ಕರೆ ಬಂದಿದೆ.
ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ತಕ್ಷಣ ವಿಮಾನದಿಂದ ಕೆಳಗಿಳಿಸಿ ತಪಾಸಣೆ ನಡೆಸಲಾಗಿದೆ. ವಿಮಾನ ನಿಲ್ದಾಣದಲ್ಲಿಯೂ ಭದ್ರತಾ ಎಚ್ಚರಿಕೆ ಘೋಷಿಸಲಾಯಿತು. ವಿಮಾನದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಇದೊಂದು ಹುಸಿ ಬಾಂಬ್ ಕರೆ ಎಂದು ಹೇಳಲಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೆಲ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.