ಶ್ರೀಲಂಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತನ್ನ ಸಹೋದ್ಯೋಗಿಗಳ ಮೇಲೆ ಪೊಲೀಸ್ ನೊಬ್ಬ ಠಾಣೆಯಲ್ಲಿಯೇ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಅಲ್ಲಿಯ ತಿರುಕ್ಕೋವಿಲ್ ಎಂಬ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗುಂಡು ಹಾರಿಸುತ್ತಿದ್ದಂತೆ ಮೂವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟರೆ, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸುತ್ತಿದ್ದಂತೆ ಆರೋಪಿ ಅಲ್ಲಿನ ಎತಿಮಲೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯು 19 ಸುತ್ತಿನ ಗುಂಡು ಹಾಗೂ ಟಿ56 ರೈಫಲ್ ಬಳಸಿ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದ್ದು, ಸದ್ಯ ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.