ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ ಸಾಧ್ಯತೆ ಇದೆ.
ಮೇ 24 ರಿಂದ ಜೂನ್ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ, ಜೂನ್ 21 ರಿಂದ ಜುಲೈ 5 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು. ಈಗಾಗಲೇ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಆದರೆ, ರಾಜ್ಯದಲ್ಲಿ ಕೊರೋನಾ ಸೋಂಕು ಭಾರಿ ಏರಿಕೆಯಾದ ಕಾರಣ ಪರೀಕ್ಷೆ ಮುಂದೂಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಸುಮಾರು 5.5 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಹಿತದೃಷ್ಟಿಯಿಂದ ವೇಳಾಪಟ್ಟಿ ಮರು ನಿಗದಿ ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಈ ನಿಟ್ಟಿನಲ್ಲಿ ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿ ಪರೀಕ್ಷೆಗೆ ದಿನಾಂಕ ಮರು ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.