ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಲು ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತಾಗಿ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ(ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮೇಲ್ವಿಚಾರಣೆ ಕಾರ್ಯಗಳಿಂದ ಖಾಸಗಿ ಶಾಲೆ ಶಿಕ್ಷಕರನ್ನು ಹೊರಗಿಡಲಾಗಿದ್ದು, ಈ ಮೂಲಕ ಶಿಕ್ಷಣ ಇಲಾಖೆ ಅವಮಾನ ಮಾಡಿದೆ. ಹೀಗಾಗಿ ಖಾಸಗಿ ಶಾಲೆಗಳ ಶಿಕ್ಷಕರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮೇಲ್ವಿಚಾರಕರಾಗಿ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆ ಶಿಕ್ಷಕರನ್ನು ಮಾತ್ರ ನಿಯೋಜಿಸಲಾಗಿದೆ. ಅನುದಾನ ರಹಿತ ಖಾಸಗಿ ಶಾಲೆ ಶಿಕ್ಷಕರನ್ನು ಹೊರಗಿಡುವ ಮೂಲಕ ಕಡೆಗಣಿಸಲಾಗಿದೆ. ಇಲಾಖೆಯ ಈ ತಾರತಮ್ಯ ಧೋರಣೆ ಅರ್ಥವಾಗದ ವಿಷಯವಾಗಿದೆ. ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಎಲ್ಲಾ ಶಿಕ್ಷಕರನ್ನು ಸಮಾನವಾಗಿ ಕಾಣಬೇಕು. ಆದರೆ ಸರ್ಕಾರವೇ ನಿಯಮ ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.
5 ಲಕ್ಷಕ್ಕೂ ಹೆಚ್ಚು ಮಕ್ಕಳು ರಾಜ್ಯದ ಖಾಸಗಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಓದುತ್ತಿದ್ದಾರೆ. ದುರುದ್ದೇಶದ ಕಾರಣಕ್ಕೆ ಖಾಸಗಿ ಶಾಲೆ ಶಿಕ್ಷಕರನ್ನು ಉತ್ತರ ಪತ್ರಿಕೆ ಮೌಲ್ಯಮಾಪನದಿಂದ ದೂರ ಇಡಲಾಗಿದೆ. ಸಂಘದ ವ್ಯಾಪ್ತಿಯ ಶಾಲೆಗಳ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಕಳುಹಿಸರದಿರಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.