ಬೆಂಗಳೂರು: ಕೊರೋನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ನಿಗದಿತ ಅವಧಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿಲ್ಲ. ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ.
ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಪೂರ್ಣಗೊಳಿಸಲು ಹೆಚ್ಚಿನ ಸಮಯ ಅವಶ್ಯಕತೆ ಇರುವುದರಿಂದ ಪ್ರತಿ ವರ್ಷದಂತೆ ಮಾರ್ಚ್ -ಏಪ್ರಿಲ್ ಬದಲಿಗೆ ಮೇ -ಜೂನ್ ವೇಳೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಪ್ರತಿ ಶೈಕ್ಷಣಿಕ ವರ್ಷದಲ್ಲಿ ಪಠ್ಯಕ್ರಮ ಪೂರ್ಣಗೊಳಿಸಲು 240 ದಿನಗಳು ಇರುತ್ತಿದ್ದವು. ಈ ಬಾರಿ 180 ದಿನಗಳಿದ್ದು, ಈ ಅವಧಿಯಲ್ಲಿ ಪಠ್ಯಕ್ರಮ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ವೇಳೆಗೆ ಅಧಿಸೂಚನೆ ಹೊರಡಿಸಬೇಕಿತ್ತು. ಆದರೆ, ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪಠ್ಯಕ್ರಮ ಪೂರ್ಣಗೊಳಿಸಲು ಸಮಯ ಬೇಕಿರುವುದರಿಂದ ಈ ವರ್ಷವೂ ಎಸ್ಎಸ್ಎಲ್ಸಿ ಪರೀಕ್ಷೆ ವಿಳಂಬವಾಗಬಹುದು ಎಂದು ಹೇಳಲಾಗಿದೆ.