ಬೆಂಗಳೂರು: 2022 -23 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಮೇ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ.
ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೀಡಿದ ಮಾದರಿಯಲ್ಲೇ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಿಸಲಾಗುತ್ತದೆ. ಮೌಲ್ಯಮಾಪನ ಕಾರ್ಯಕ್ಕೆ ಗೈರುಹಾಜರಾಗದೆ ಕಡ್ಡಾಯವಾಗಿ ಎಲ್ಲರೂ ಹಾಜರಾಗುವಂತೆ ಮೌಲ್ಯಮಾಪಕರಿಗೆ ತಿಳಿಸಲಾಗಿದೆ. ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಗೆ ತೊಂದರೆಯಾಗದಂತೆ ಮೇ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.