ಬೆಂಗಳೂರು: ಇಂದಿನಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ನಡೆಯಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಈ ಬಾರಿ 4,41,910 ಬಾಲಕರು, 4,28,058 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. 8.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ರೆಗ್ಯುಲರ್, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ದಿನದಂದು ಸೆಕ್ಷನ್ 144 ಕಲಂ ನ್ನು ಜಾರಿಗೊಳಿಸಿ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಅವಕಾಶ ನೀಡಲಾಗಿದೆ.