ಬೆಂಗಳೂರು: ಹಾಜರಾತಿ ಕೊರತೆಯಿಂದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
2022 -23 ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾತಿ ಕೊರತೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಲು ಮೇ 26ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.
ಶೇಕಡ 75 ರಷ್ಟು ಹಾಜರಾತಿ ಇಲ್ಲದ 26,900 ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ನೀಡಿರಲಿಲ್ಲ. ಈ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡು ಶುಲ್ಕ ಪಾವತಿಸಿದ್ದರು. ಇವರಿಗೆ ಜೂನ್ ನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ಹಾಜರಾಗುವ ಅವಕಾಶ ಕಲ್ಪಿಸಿದೆ.
ಚಲನ್ ನಲ್ಲಿ ನೋಂದಣಿ ಶುಲ್ಕ ಭರ್ತಿ ಮಾಡಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಜಮೆ ಮಾಡಲು ಮೇ 27ರಿಂದ 29 ರವರೆಗೆ ಅವಕಾಶ ಕಲ್ಪಿಸಿದೆ. ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅರ್ಹ ವಿದ್ಯಾರ್ಥಿಗಳನ್ನು ನಿಯಮಾನುಸಾರ ನೋಂದಾಯಿಸುವುದು ಶಾಲಾ ಮುಖ್ಯ ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಲಾಗಿದೆ.