ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ವಲಸೆ ಕಾರ್ಮಿಕರು, ಹಾಸ್ಟೆಲ್ ನಲ್ಲಿರುವ ಮಕ್ಕಳು ಕೊರೋನಾ ಲಾಕ್ಡೌನ್ ಕಾರಣದಿಂದ ಊರಿಗೆ ತೆರಳಿದ್ದರೆ, ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಗಳ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ಕಷ್ಟವಾಗಲಿದೆ. ಈ ಕಾರಣದಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ತಮ್ಮ ಸ್ವಂತ ಜಿಲ್ಲೆ, ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.
ಮೂಲ ಪರೀಕ್ಷಾ ಕೇಂದ್ರಗಳ ಬದಲಿಗೆ ತಾವಿರುವ ಸ್ಥಳದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಲಿಚ್ಛಿಸುವ ವಲಸೆ ಕಾರ್ಮಿಕರ ಮಕ್ಕಳು, ಹಾಸ್ಟೆಲ್ ಮತ್ತು ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.