ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಸಾಧಿಸಿದ್ದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲೂ ಅತ್ಯಧಿಕ ಸೀಟು ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಬಿಜೆಪಿಯ ಕೆಲ ಶಾಸಕರುಗಳನ್ನು ಸೆಳೆಯಲು ಮುಂದಾಗಿದೆ ಎಂದು ಹೇಳಲಾಗಿತ್ತು.
ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಅವರುಗಳು ಸಹ ಕಾಂಗ್ರೆಸ್ ಸೇರ್ಪಡೆ ಕುರಿತು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತುಗಳನ್ನಾಡಿದ್ದರು.
ಇದರ ಮಧ್ಯೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಒಟ್ಟಿಗೆ ಎದುರಿಸುವ ತೀರ್ಮಾನ ಕೈಗೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ವಿದ್ಯಮಾನ ನಡೆಯುತ್ತಿದ್ದಂತೆ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕೂಡ ಭದ್ರ ನೆಲೆ ಕಂಡುಕೊಂಡಿದ್ದು, ಬಿಜೆಪಿಯೂ ಗಟ್ಟಿಯಾಗಿ ತಳವೂರಿದೆ. ಹೀಗಾಗಿ ಒಂದೊಮ್ಮೆ ಕಾಂಗ್ರೆಸ್ ಸೇರ್ಪಡೆಗೊಂಡರೆ ಗೆಲ್ಲುವುದು ಸುಲಭವಲ್ಲ ಎಂಬ ಕಾರಣಕ್ಕೆ ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆಯಲು ಹಿಂದೇಟು ಹಾಕುತ್ತಿದ್ದಾರೆನ್ನಲಾಗಿದ್ದು, ಶಿವರಾಮ ಹೆಬ್ಬಾರ್ ಕೂಡ ಇಂತಹ ಕಾರಣಗಳಿಗಾಗಿ ಕಾಂಗ್ರೆಸ್ ಸೇರ್ಪಡೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ ಎನ್ನಲಾಗಿದೆ.