ಬೆಂಗಳೂರು: ಸಹಕಾರ ಕ್ಷೇತ್ರದ ಬಲವರ್ಧನೆಗೆ ಅನೇಕ ಕ್ರಮಕೈಗೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಸೇವಾ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಿ ಮೂಲಸೌಕರ್ಯ ಒದಗಿಸಲು ಗೋದಾಮು, ಶೀತಲ ಕೇಂದ್ರ ನಿರ್ಮಾಣ ಮಾಡಲು ಮತ್ತು ರೈತ ಸೇವಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಸದೃಢಗೊಳಿಸಲು 402 ಲೆಕ್ಕಪರಿಶೋಧಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ವರ್ಷ 30 ಲಕ್ಷ ರೈತರಿಗೆ 20,810 ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿದೆ. ಕಳೆದ ವರ್ಷ 14,500 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿ ಗುರಿ ಮೀರಿ ಸಾಲ ನೀಡಲಾಗಿದೆ. ಈ ವರ್ಷವೂ ಸಹಕಾರಿ ಬ್ಯಾಂಕುಗಳ ಮೂಲಕ 3 ಲಕ್ಷ ರೂಪಾಯಿವರೆಗೆ ಹೈನುಗಾರಿಕೆ ಸೇರಿದಂತೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದು ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.