ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿತ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನರಾಗಿದ್ದಾರೆ.
ಎಲ್ಗಾರ್ ಪರಿಷತ್ -ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಸ್ವಾಮಿ ಅವರನ್ನು ಬಂಧಿಸಲಾಗಿದ್ದು, ಅನಾರೋಗ್ಯದ ಕಾರಣ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಮೇ ತಿಂಗಳಲ್ಲಿ ಬಾಂಬೆ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರನ್ನು ತಾಲೋಜಾ ಜೈಲಿನಿಂದ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಕಳೆದ ವಾರ ಸ್ವಾಮಿ ಅವರು ಜಾಮೀನು ಕೋರಿ ಹೈಕೋರ್ಟ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದರು. ಕಾನೂನು ಬಾಹಿರ ಚಟುವಟಿಕೆ ತಡೆ ಸೆಕ್ಷನ್ ಬಗ್ಗೆ ಅರ್ಜಿಯಲ್ಲಿ ಪ್ರಶ್ನಿಸಿದ್ದರು.
ಎಲ್ಗಾರ್ ಪ್ರಕರಣದಲ್ಲಿ ಸ್ಟ್ಯಾನ್ ಸ್ವಾಮಿ ಮತ್ತು ಸಹ ಆರೋಪಿಗಳನ್ನು ನವಿ ಮುಂಬೈನ ತಾಲೋಜಾ ಜೈಲಿನಲ್ಲಿ ಇರಿಸಲಾಗಿತ್ತು. ಆರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಅವರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗಿದೆ ಎಂದು ಸ್ವಾಮಿ ಅವರ ಹಿರಿಯ ಸಲಹೆಗಾರ ಮಿಹಿರ್ ದೇಸಾಯಿ ತಿಳಿಸಿದ್ದಾರೆ.