ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ’.
‘ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪ್ಲೋಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ ಉದ್ಯೋಗ ದೊರೆಯದೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಕರ್ನಾಟಕದಲ್ಲಿ ವಾಸವಿರುವವರು, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರಿಗೆ ಈ ಯೋಜನೆ ಅನ್ವಯವಾಗಲಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇಂದಿನಿಂದ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.