
ಹುಬ್ಬಳ್ಳಿ: ಮೇ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.
ಈ ಹಿಂದೆ ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಮೇ ತಿಂಗಳಲ್ಲಿ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹಮದ್ ಅವರು, ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಶೀಘ್ರವೇ ಉಚ್ಚಾಟಿಸುವ ಮಾಹಿತಿ ಇದೆ. ಇಬ್ಬರು ನಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಯಾವಾಗ ಅಧಿಕೃತವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬುದನ್ನು ನೋಡಬೇಕಿದೆ. ಇನ್ನು ಕೆಲವು ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ನಮ್ಮ ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.