ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಕೋವಿಡ್ ಕೇಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗುವುದು. ಮೇ 15 ರವರೆಗೆ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ತುರ್ತು ಸಭೆ ಕರೆದಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಬೆಳಗ್ಗೆ ತುರ್ತು ಸಭೆ ನಡೆಯಲಿದ್ದು, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಸಚಿವರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ತಜ್ಞರು ಶಿಫಾರಸು ಮಾಡಿದ್ದಾರೆ. ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಮುಚ್ಚುವಂತೆ ಕೂಡ ಸಲಹೆ ನೀಡಲಾಗಿದ್ದು, ಬಾರ್, ಪಬ್ ಬಂದ್ ಮಾಡಲು ತಿಳಿಸಲಾಗಿದೆ. ಶಾಲೆ-ಕಾಲೇಜುಗಳನ್ನು ಕೂಡ ಬಂದ್ ಮಾಡುವಂತೆ ಶಿಫಾರಸು ಮಾಡಿದ್ದು, ರಾಜ್ಯದ ಎಲ್ಲ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲು ಸಲಹೆ ನೀಡಲಾಗಿದೆ.
ಜನಜಂಗುಳಿ ಸೇರುವಂತಹ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಬೇಕು. ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು. ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಗೊಳಿಸುವ ಜೊತೆಗೆ ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಕ್ಕೆ ತಾಂತ್ರಿಕ ಸಲಹಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.