ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದು, ಇನ್ಮುಂದೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಅವಹಾಲು ಆಲಿಸಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ನಡೆಸುವ ಸಂಬಂಧ ಸೆಪ್ಟೆಂಬರ್ 25 ರಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಉ ಮೊದಲ ಜಿಲ್ಲಾ ಹಂತದ ಜನತಾ ದರ್ಶನ ಹಮ್ಮಿಕೊಳ್ಳಬೇಕು. ಬಳಿಕ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಒಂದೊಂದು ತಾಲೂಕು ಮಟ್ಟದ ಜನತಾದರ್ಶನ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜನತಾ ದರ್ಶನ ಕಾರ್ಯಕ್ರಮ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿ ಸೂಚನೆ ನೀಡಿದ್ದು, ಜನತಾ ದರ್ಶನ ದಿನ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು. ಜೊತೆಗೆ ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿ ಅಥವಾ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕೊರತೆ ನಿವಾರಣಾ ವ್ಯವಸ್ಥೆ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ತಿಳಿಸಿದ್ದಾರೆ.