ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕ ಇಲಾಖೆ ವತಿಯಿಂದ ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಕ್ಕೆ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಪದಾಧಿಕಾರಿಗಳು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಾರ್ಮಿಕ ಇಲಾಖೆ ವತಿಯಿಂದ ಆದೇಶ ಹೊರಡಿಸಲಾಗಿದೆ.
ಪತ್ರಿಕಾ ವಿತರಕರು ಕಾರ್ಮಿಕರಾಗಿದ್ದು ಅವರಿಗೂ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಒತ್ತಾಯಿಸಲಾಗಿತ್ತು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 2022 ರಲ್ಲಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಗಣೇಶ್ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಪರಿಹಾರ ದೊರಕಿಸಿಕೊಡಲು ಹೋರಾಟ ನಡೆಸಲಾಗಿತ್ತು. ಕಾರ್ಮಿಕ ಇಲಾಖೆ ಮೊದಲ ಬಾರಿಗೆ ಎರಡು ಲಕ್ಷ ರೂ. ಪರಿಹಾರ ಘೋಷಿಸಿತ್ತು.