![](https://kannadadunia.com/wp-content/uploads/2024/01/Cm-siddaramaiah-6.jpg)
ಬೆಂಗಳೂರು :ಜನಸೇವೆಯನ್ನೇ ಪ್ರಮುಖ ಗುರಿಯನ್ನಾಗಿಸಿರುವ ನಮ್ಮ ಸರ್ಕಾರವು ರಾಜ್ಯದ ಜನರಿಗೆ ಅತ್ಯುತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ, ಸೇವೆಗಳನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಡಯಾಲಿಸಿಸ್ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಿ ಉತ್ತಮ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ರಾಜ್ಯಾದ್ಯಂತ ಉಚಿತ ಡಯಾಲಿಸಿಸ್ ಸೇವೆಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಎಲ್ಲಾ ವರ್ಗದ ಜನರಿಗೆ ಉತ್ತಮ ವೈದ್ಯಕೀಯ ಸಿಗಬೇಕು ಎಂಬ ಉದ್ದೇಶದಿಂದ ತಜ್ಞರ ಬಳಿ ಚರ್ಚಿಸಿ ಡಯಾಲಿಸಿಸ್ ಸೇವೆಗಳಲ್ಲಿ ಬದಲಾವಣೆ ತರಲಾಗಿದೆ ಎಂದರು.
ಜನರ ಆರೋಗ್ಯ ಹಾಗೂ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ಏಕಬಳಕೆಯ ಡಯಾಲೈಸರ್ ಅಳವಡಿಕೆ ಮಾಡಲಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳಿಗೆ 800 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗುತ್ತಿದ್ದು ಇದರಿಂದ ವಾರ್ಷಿಕ ಸುಮಾರು 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಇದರಿಂದಾಗಿ ಡಯಾಲಿಸಿಸ್‌ಗೆ ಒಳಪಡುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಜನರ ಆರೋಗ್ಯವನ್ನು ಸುಧಾರಿಸುವ ಹಾಗೂ ಪ್ರತಿಯೊಬ್ಬ ವ್ಯಕ್ತಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಕಲ್ಪಿಸುವ ನಮ್ಮ ಸಂಕಲ್ಪವನ್ನು ನಾವು ಸಾಕಾರಗೊಳಿಸಿಯೇ ಸಿದ್ಧ. ಆರೋಗ್ಯಕರ ಸಮಾಜ ನಿರ್ಮಿಸಲು ನಮ್ಮ ಹೆಗಲ ಮೇಲಿರುವ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.