ಬೆಂಗಳೂರು: ರೈತರ ಜಮೀನನ್ನು ವಕ್ಫ್ ಬೋರ್ಡ್ ಗೆ ಹಸ್ತಾಂತರ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ನವೆಂಬರ್ 4ರಂದು ರಾಜ್ಯಾದ್ಯಂತ ಬಿಜೆಪಿಯು ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರ ಪಹಣಿಗಳಲ್ಲಿ ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವ ಮೂಲಕ ರೈತರ ಜಮೀನನ್ನು ಕಬಳಿಸುವ ಪ್ರಯತ್ನ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಎಲ್ಲ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ದೂರಿದ್ದಾರೆ.
ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಗೆ ಸೇರಿಸಲು ಹುನ್ನಾರ ನಡೆದಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಚನಾತ್ಮಕ ವಿರೋಧ ಪಕ್ಷವಾಗಿ ರೈತರ ಪರವಾಗಿ ಬಿಜೆಪಿ ಹೋರಾಟ ನಡೆಸಲಿದೆ. ಹೋರಾಟದಲ್ಲಿ ಎಲ್ಲ ಜನ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕೋರಿದ್ದಾರೆ.