ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜೊತೆಗೆ ಹೊರ ದೇಶದಿಂದಲೂ ರೋಗಿಗಳು ಶಸ್ತ್ರಚಿಕಿತ್ಸೆಗೆ ಬರುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದಂತಹ ಯೋಜನೆಗಳು ಇಲ್ಲಿನ ಜನರಿಗೆ ಆಶಾಕಿರಣವಾಗಿದ್ದು, ಲಕ್ಷಾಂತರ ರೂಪಾಯಿ ವೆಚ್ಚದ ಶಸ್ತ್ರಚಿಕಿತ್ಸೆಗಳನ್ನೂ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಸಂಖ್ಯೆ ಹೆಚ್ಚಳಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
243 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿವೆ, 301 ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ನೋಂದಾಯಿಸಲ್ಪಟ್ಟಿವೆ. ಕಳೆದ ಎರಡು ವರ್ಷದಲ್ಲಿ 1.75 ಲಕ್ಷ ಜನ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಗರದಲ್ಲಿ 71 ಆರೋಗ್ಯ ಕವಚ ಆಂಬುಲೆನ್ಸ್ ಗಳಿವೆ. 331 ಜನೌಷಧಿ ಮಳಿಗೆಗಳು ಇವೆ.