ಬೆಂಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರು ಕೈಗೊಂಡಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ.
ಬೇಡಿಕೆ ಈಡೇರಿಸಲು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಅಂತ್ಯಗೊಳಿಸಲಾಗಿದೆ.
ಮುಷ್ಕರ ಆರಂಭದ ದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಲಿಖಿತ ರೂಪದಲ್ಲಿ ಭರವಸೆ ನೀಡದ ಕಾರಣ ಮುಷ್ಕರ ಮುಂದುವರಿಸಲಾಗಿತ್ತು.
ಇಂದು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕಾರ್ಮಿಕ ಮುಖಂಡರೊಂದಿಗೆ ಮಾತನಾಡಿ, ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲು ತೀರ್ಮಾನಿಸಲಾಗಿದೆ. ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಮುಷ್ಕರವನ್ನು ಅಂತ್ಯಗೊಳಿಸಲಾಗಿದೆ ಎಂದು ಹೇಳಲಾಗಿದೆ.