ದಾವಣಗೆರೆ: ಮಾರ್ಚ್ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕರೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ನಡೆದ ಶೈಕ್ಷಣಿಕ ಕಾರ್ಯಾಗಾರ, ರಾಜ್ಯಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶ, ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
7ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನೌಕರರ ಬಗ್ಗೆ ಉದಾಸೀನ ತೋರಿದ್ದಾರೆ. ಅವರ ಧೋರಣೆಯಿಂದ 9 ಲಕ್ಷ ನೌಕರರಿಗೆ ಅನ್ಯಾಯವಾಗಿದೆ. ಮಾರ್ಚ್ 1 ರಿಂದ ನಡೆಯುವ ಮುಷ್ಕರದಲ್ಲಿ ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ ಮಾಡುವವರೆಗೂ ಹೋರಾಟ ಮುಂದುವರೆಯಲಿದೆ. ಇನ್ನು ಎರಡು ದಿನ ಕಾಲಾವಕಾಶವಿದ್ದು, ಸರ್ಕಾರ ಸ್ಪಂದಿಸದಿದ್ದರೆ ಮುಷ್ಕರ ಅನಿವಾರ್ಯ ಎಂದು ಹೇಳಿದ್ದಾರೆ.